ಬೆಂಗಳೂರು: ಕಬ್ಬಿಣ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪದಡಿ ಬಂಧಿತರಾಗಿರುವ ಕಾರವಾರ - ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಸೆಪ್ಟೆಂಬರ್ 12ರವರೆಗೂ ಇ.ಡಿ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆದೇಶಿಸಿದ್ದಾರೆ.
ಬಂಧಿತ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ)ದ ಅಧಿಕಾರಿಗಳು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಸೈಲ್ ಅವರನ್ನು ಸೆ.12ರವರೆಗೆ ಎರಡು ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು.
ಕೆಲ ದಿನಗಳ ಹಿಂದೆ ಇ.ಡಿ ದಾಳಿ: ಪ್ರಕರಣದಲ್ಲಿ ಅಕ್ರಮವಾಗಿ ಹಣದ ವರ್ಗಾವಣೆ ಸಹ ಕಂಡುಬಂದ ಹಿನ್ನೆಲೆಯಲ್ಲಿ, ಇಸಿಐಅರ್ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಪ್ರತ್ಯೇಕ ತನಿಖೆ ಆರಂಭಿಸಿದ್ದರು. ಆಗಸ್ಟ್ 13 ಮತ್ತು 14ರಂದು ಸತೀಶ್ ಸೈಲ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿದಾಗ ನಗದು, ಚಿನ್ನಾಭರಣ ಸಹಿತ 13 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ಸತೀಶ್ ಸೈಲ್ ಅವರಿಗೆ ನೋಟಿಸ್ ನೀಡಿದ್ದರು.
ಮಂಗಳವಾರ ಶಾಂತಿ ನಗರದ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದ್ದ ಸತೀಶ್ ಸೈಲ್ ಅವರನ್ನು ಅಧಿಕಾರಿಗಳು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಬಳಿಕ ಅವರನ್ನು ಬಂಧನ ಮಾಡಲಾಗಿದೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಕೇಳಲಾಗುವುದು ಎಂದು ಇ.ಡಿ ಮೂಲಗಳು ಖಚಿತಪಡಿಸಿವೆ.
ಸತೀಶ್ ಸೈಲ್ ಬಂಧನದ ಅವಶ್ಯಕತೆ ಇರಲಿಲ್ಲ ಎಂದ ಡಿಕೆಶಿ: ಸತೀಶ್ ಸೈಲ್ ಅವರ ಬಂಧನದ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ''ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010 ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆ ಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ನಡೆಯುತ್ತಿದೆ'' ಎಂದು ಹೇಳಿದ್ದಾರೆ.