ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ; ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​

ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ; ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​
By Published : October 30, 2025 at 8:55 AM IST

ಬೆಂಗಳೂರು:ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ (ಸಿಎಂಐಡಿಪಿ) ಶಾಸಕರಿಗೆ ಅನುದಾನ‌ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬುದಾಗಿ ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್​ ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಸಿಎಂಐಡಿಪಿ ಯೋಜನೆಯಡಿ ಆಡಳಿತ ಪಕ್ಷದ ಶಾಸಕರಿಗೆ‌ 50 ಕೋಟಿ ರು. ಹಾಗೂ ವಿರೋಧ ಪಕ್ಷದ ಶಾಸಕರಿಗೆ 25 ಕೋಟಿ ‌ರೂ. ಅನುದಾ‌ನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಬಾಗಲಕೋಟೆ ‌ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ಶಿವಯ್ಯ ಗುಡಗುಂಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ. ಎಂ.

ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 2025 - 2026ರ ಬಜೆಟ್‌ನಲ್ಲಿ ಸಿಎಂಐಡಿಪಿ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆ ಅಡಿ ಆಡಳಿತ ಪಕ್ಷದ ಶಾಸಕರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳಿಗೆ 50 ಕೋಟಿ ರೂ. ಮತ್ತು ವಿರೋಧ ಪಕ್ಷದ ಶಾಸಕರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳಿಗೆ 25 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ಪೀಠ ನೋಟಿಸ್​ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಅರ್ಜಿಯಲ್ಲೇನಿದೆ? : ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷದ ಶಾಸಕರು ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಾರತಮ್ಯ ಮಾಡುತ್ತಿರುವ ಸರ್ಕಾರದ ಈ ಧೋರಣೆಯು ಸಂವಿಧಾನದ 14ನೇ ವಿಧಿ ಅಡಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳು ಹಾಗೂ 38 ಮತ್ತು 39ನೇ ವಿಧಿ ಅಡಿಯಲ್ಲಿನ ರಾಜ್ಯ ನೀತಿ ನಿರ್ದೇಶಕ ತತ್ವಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಇತರ ವಿಧಾನಸಭೆ ಕ್ಷೇತ್ರಗಳಂತೆ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೂ 50 ಕೋಟಿ ರೂ. ಅನುದಾನ ಮಂಜೂರು ಮಾಡಲು ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿರುವ ಅರ್ಜಿಯಲ್ಲಿ ಕೋರಿರುವ ಶಾಸಕರು, ಅರ್ಜಿ ಇತ್ಯರ್ಥವಾಗುವವರೆಗೆ ಸೆಪ್ಟೆಂಬರ್ 9ರಂದು ತಾವು ಸಲ್ಲಿಸಿರುವ ಮನವಿಯನ್ನು ಮರುಪರಿಗಣಿಸಿ, ಸಿಎಂಐಡಿಪಿಯಿಂದ ಜಮಖಂಡಿ ವಿಧಾನಸಭೆ ಕ್ಷೇತ್ರಕ್ಕೆ 50 ಕೋಟಿ ರೂ. ಹಂಚಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

📚 Related News