ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ನಲ್ಲಿ 33 ಅಡಿ ಎತ್ತರದ ಪರಶುರಾಮನ ಪ್ರತಿಮೆ ಮರು ನಿರ್ಮಿಸಿ ಅನಾವರಣಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಹೊಸದಾಗಿ ಟೆಂಡರ್ ಕರೆದು ಪರಶುರಾಮ ಮೂರ್ತಿಯನ್ನು ಮರು ಪ್ರತಿಷ್ಠಾಪನೆ ಮಾಡುವ ಸಂಬಂಧ ಸಲ್ಲಿಸಿರುವ ಮನವಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಉಡುಪಿ ಜಿಲ್ಲೆಯ ವರಂಗ ನಿವಾಸಿಯಾಗಿರುವ ಕೆಪಿಸಿಸಿ ಸದಸ್ಯರು ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತರಾದ ಉದಯ್ ಶೆಟ್ಟಿ ಮುನಿಯಾಳ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಅರ್ಜಿ ಸಂಬಂಧ ಈ ಹಿಂದಿನ ವಿಚಾರಣೆಯಲ್ಲಿ ಪ್ರತಿಕ್ರಿಯಿಸಿದ ನ್ಯಾಯಪೀಠವು, ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿತ್ತು. ಇದಕ್ಕೆ ವಕೀಲರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಬಳಿಕ ಪೀಠ, ನೀವು 5 ಲಕ್ಷ ರೂ.ಗಳನ್ನು ಪಾವತಿಸುವಿರೇ ಎಂದು ಪ್ರಶ್ನಿಸಿತು. ಇದಕ್ಕೆ ಸಮ್ಮತಿಸಿ, ಐದು ಲಕ್ಷ ರೂ. ಪಾವತಿ ಮಾಡುವುದಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು.
ಇಂದು ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನ್ಯಾಯಪೀಠದ ಸೂಚನೆ ಮೇರೆಗೆ 5 ಲಕ್ಷ ರು.ಗಳನ್ನು ಹೈಕೋರ್ಟ್ ರಿಜಿಸ್ಟ್ರಾರ್ ಬಳಿ ಠೇವಣಿ ಇಡಲಾಗಿದೆ ಎಂದು ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿಯೇನು ?: ಕರಾವಳಿ ಕರ್ನಾಟಕ ಪ್ರದೇಶದ ಹಿಂದೂಗಳ ಧಾರ್ಮಿಕ ಭಾವನೆಗಳು ಸಾಂಸ್ಕೃತಿಕ ಪರಂಪರೆ ರಕ್ಷಿಸುವ ಉದ್ದೇಶದಿಂದ ಅರ್ಜಿ ಸಲ್ಲಿಸಲಾಗಿದೆ. 2023ರ ಜನವರಿ 27ರಲ್ಲಿ ಸರ್ಕಾರದಿಂದ ಸಾರ್ವಜನಿಕ ತೆರಿಗೆ ಹಣದಿಂದ 33 ಅಡಿಯ ಪರಶುರಾಮ ಪ್ರತಿಮೆ ಉದ್ಘಾಟನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕಂಚಿನ ಪ್ರತಿಮೆ ಬದಲಿಗೆ ಹಿತ್ತಾಳೆ ಪ್ರತಿಮೆ ಅನಾವರಣ ಮಾಡಿ ದೊಡ್ಡ ಮಟ್ಟದ ಅಕ್ರಮ ನಡೆದಿತ್ತು ಎಂಬ ಆರೋಪವಿತ್ತು. ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಪ್ರತಿಮೆ ತೆರವುಗೊಳಿಸಲಾಗಿತ್ತು.
ಅಲ್ಲದೇ, ಅವ್ಯವಹಾರ ಆರೋಪ ಸಂಬಂಧ ಶಿಲ್ಪಿ ಕೃಷ್ಣ ನಾಯಕ್ ಮತ್ತು ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಇತ್ಯರ್ಥಕ್ಕೆ ಹಲವು ವರ್ಷಗಳಾಗಲಿದೆ. ಹೀಗಾಗಿ ಪ್ರತಿಮೆ ಮತ್ತೆ ಅನಾವರಣ ಮಾಡಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದರು.
ಈ ಎಲ್ಲ ಸಮಸ್ಯೆಗಳ ಕುರಿತಂತೆ ಅರ್ಜಿದಾರರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ, ಪ್ರತಿಮೆ ಮರು ನಿರ್ಮಾಣಕ್ಕೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಥೀಮ್ ಪಾರ್ಕ್ ನಿರ್ಮಾಣ ಅಪೂರ್ಣಗೊಂಡಿದ್ದು, ಈ ಭಾಗದ ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ಹಾನಿಯುಂಟಾಗಿದೆ. ಆದ್ದರಿಂದ, ಹೊಸದಾಗಿ ಪ್ರತಿಮೆ ನಿರ್ಮಾಣಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಜತೆಗೆ, ಅರ್ಜಿದಾರರು ಸಲ್ಲಿಸಿರುವ ಮನವಿಗೆ ಸಂಬಂಧಪಟ್ಟಂತೆ ಸರ್ಕಾರದ ಪ್ರಾಧಿಕಾರ ಪರಿಗಣಿಸಬೇಕು ಮತ್ತು ಈಗಾಗಲೇ ತೆರವು ಮಾಡಲಾಗಿರುವ ಪರಶುರಾಮ ಪ್ರತಿಮೆಯ ಅವಶೇಷಗಳನ್ನು ಸಂರಕ್ಷಣೆ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.